26 ಆಮೇಲೆ ದೇವರು, ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯರನ್ನು ಉಂಟು ಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ, ಪ್ರಾಣಿಗಳ ಮೇಲೆಯೂ, ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಕೀಟಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ದೊರೆತನಮಾಡಲಿ ಅಂದನು. 27 ಹೀಗೆ ದೇವರು;
"ಮನುಷ್ಯನನ್ನು ತನ್ನ ಸ್ವರೂಪದಲ್ಲಿ
ಉಂಟುಮಾಡಿದನು.
ದೇವರ ಸ್ವರೂಪದಲ್ಲಿ ಅವನನ್ನು
ಉಂಟುಮಾಡಿದನು.
ಅವರನ್ನು ಗಂಡುಹೆಣ್ಣಾಗಿ ಸೃಷ್ಟಿ ಮಾಡಿದನು."
28 ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿ, "ನೀವು ಬಹು ಸಂತಾನವುಳ್ಳವರಾಗಿ ಹೆಚ್ಚಿರಿ. ಭೂಮಿಯಲ್ಲಿ ತುಂಬಿಕೊಂಡು ಅದನ್ನು ವಶಮಾಡಿಕೊಳ್ಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ದೊರೆತನ ಮಾಡಿರಿ" ಎಂದು ಅವರಿಗೆ ಹೇಳಿದನು.