18 ಅನಂತರ ಯೆಹೋವನಾದ ದೇವರು, "ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ. ಅವನಿಗೆ ಸರಿಯಾದ ಸಹಕಾರಿಯನ್ನು ಉಂಟುಮಾಡುವೆನು" ಅಂದನು.
19 ಯೆಹೋವನು ಎಲ್ಲಾ ಭೂಜಂತುಗಳನ್ನೂ ಆಕಾಶದ ಪಕ್ಷಿಗಳನ್ನೂ, ನೆಲದ ಮಣ್ಣಿನಿಂದ ಸೃಷ್ಟಿಸಿ ಇವುಗಳಿಗೆ ಮನುಷ್ಯನು ಏನೇನು ಹೆಸರಿಡುವನೋ ನೋಡೋಣ ಎಂದು ಅವನ ಬಳಿಗೆ ಬರಮಾಡಿದನು. ಮನುಷ್ಯನು ಒಂದೊಂದು ಪ್ರಾಣಿಗೆ ಯಾವ ಯಾವ ಹೆಸರಿಟ್ಟನೋ ಅದೇ ಅವುಗಳ ಹೆಸರಾಯಿತು. 20 ಹೀಗೆ 2:20 ಮನುಷ್ಯನುಆದಾಮನು ಎಲ್ಲಾ ಪಶುಗಳಿಗೂ, ಆಕಾಶದ ಪಕ್ಷಿಗಳಿಗೂ, ಕಾಡುಮೃಗಗಳಿಗೂ ಹೆಸರಿಟ್ಟನು. ಆದರೆ ಆ ಮನುಷ್ಯನಿಗೆ ಸರಿಯಾದ ಸಹಕಾರಿ ಸಿಗಲಿಲ್ಲ.
21 ಹೀಗಿರುವಲ್ಲಿ ಯೆಹೋವನಾದ ದೇವರು ಆ ಮನುಷ್ಯನಿಗೆ ಗಾಢನಿದ್ರೆಯನ್ನು ಬರಮಾಡಿ ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತೆಗೆದುಕೊಂಡು ಅದರ ಸ್ಥಳವನ್ನು ಮಾಂಸದಿಂದ ತುಂಬಿದನು. 22 ಯೆಹೋವನು ಮನುಷ್ಯನಿಂದ ತೆಗೆದ ಎಲುಬನ್ನು, ಸ್ತ್ರೀಯನ್ನಾಗಿ ಮಾಡಿ ಆಕೆಯನ್ನು ಅವನ ಬಳಿಗೆ ಕರೆದುಕೊಂಡು ಬಂದನು. ಅವನು ಆಕೆಯನ್ನು ನೋಡಿ,
23 "ಈಗ ಸರಿ, ಈಕೆಯು ನನ್ನ ಎಲುಬುಗಳಿಂದ ಬಂದ ಎಲುಬು,
ನನ್ನ ಮಾಂಸದಿಂದ ಬಂದ ಮಾಂಸವೂ ಆಗಿದ್ದಾಳೆ.
ಈಕೆಯು ಮನುಷ್ಯನಿಂದ ಉತ್ಪತ್ತಿಯಾದ ಕಾರಣ ನಾರೀ ಎನ್ನಿಸಿಕೊಳ್ಳುವಳು" ಅಂದನು.
24 ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು.