4 ನಾನು ಲೋಕಕ್ಕೆ ಅಸ್ತಿವಾರ ಹಾಕಿದಾಗ ನೀನು ಎಲ್ಲಿದ್ದಿ?
ನೀನು ಜ್ಞಾನಿಯಾಗಿದ್ದರೆ ಹೇಳು.
5 ಅದರ ಅಳತೆಗಳನ್ನು ಯಾರು ಗೊತ್ತುಮಾಡಿದರು? ನೀನೇ ಬಲ್ಲೆ.
ಅದರ ಮೇಲೆ ನೂಲುಹಿಡಿದವರು ಯಾರು?
6 ಭೂಲೋಕದ ಅಸ್ತಿವಾರವು ಯಾವುದರ ಮೇಲೆ ನೆಲೆಗೊಂಡವು?
ಅದರ ಮೂಲೆಗಲ್ಲನ್ನು ಹಾಕಿದವರು ಯಾರು?
7 ಮುಂಜಾನೆ ನಕ್ಷತ್ರಗಳು ಒಟ್ಟಾಗಿ ಉತ್ಸಾಹ ಧ್ವನಿಯೆತ್ತುತ್ತಾ
ದೇವಕುಮಾರರೆಲ್ಲರೂ ಆನಂದ ಘೋಷಮಾಡುತ್ತಾ ಇರಲು,
8 ಸಮುದ್ರವು ಭೂಗರ್ಭವನ್ನು ಭೇದಿಸಿಕೊಂಡು ಬರಲು,
ಅದರ ದ್ವಾರಗಳನ್ನು ಮುಚ್ಚಿದವರು ಯಾರು?
9 ಆ ಕಾಲದಲ್ಲಿ ನಾನು ಮೋಡಗಳನ್ನು ಅದಕ್ಕೆ ವಸ್ತ್ರವನ್ನಾಗಿಯೂ,
ಕಾರ್ಗತ್ತಲನ್ನು ಸುತ್ತುಬಟ್ಟೆಯನ್ನಾಗಿಯೂ ಮಾಡಿದೆನಲ್ಲವೆ?
10 ಇದಲ್ಲದೆ ಸಮುದ್ರಕ್ಕೆ ನನ್ನ ಇಷ್ಟದ ಮೇರೆಯನ್ನು ಕಟ್ಟಿ,
ಅದಕ್ಕೆ ಅಗುಳಿ, ಕದಗಳನ್ನು ಹಾಕಿದೆನು
11 ‘ಇಲ್ಲಿಯ ತನಕ ಬರಬಹುದು; ಮೀರಿ ಬರಬೇಡ,
ನಿನ್ನ ತೆರೆಗಳ ಹೆಮ್ಮೆಗೆ ಇಲ್ಲೇ ತಡೆಯಾಗುವುದು’ ಎಂದು ಅಪ್ಪಣೆಕೊಟ್ಟೆನು.