4 ಅದೇನೆಂದರೆ, "ನಿಮ್ಮೊಳಗೆ ಯಾವ ಮನುಷ್ಯನಾದರೂ ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದು ಕಳೆದುಹೋದರೆ ಅವನು ತೊಂಬತ್ತೊಂಬತ್ತನ್ನೂ ಅಡವಿಯಲ್ಲಿ ಬಿಟ್ಟು ಕಳೆದುಹೋದದ್ದು ಸಿಕ್ಕುವ ತನಕ ಅದನ್ನು ಹುಡುಕಿಕೊಂಡು ಹೋಗದೆ ಇದ್ದಾನೆಯೇ? 5 ಸಿಕ್ಕಿದ ಮೇಲೆ ಅವನು ಸಂತೋಷದಿಂದ ಅದನ್ನು ತನ್ನ ಹೆಗಲಿನ ಮೇಲೆ ಹೊತ್ತುಕೊಂಡು, 6 ಮನೆಗೆ ಬಂದು ಸ್ನೇಹಿತರನ್ನೂ ನೆರೆಹೊರೆಯವರನ್ನೂ ಕೂಡಿಸಿ, ‘ಕಳೆದುಹೋಗಿದ್ದ ಕುರಿ ಸಿಕ್ಕಿತು, ನನ್ನ ಸಂಗಡ ಸಂತೋಷಿಸಿರಿ’ ಎಂದು ಅವರಿಗೆ ಹೇಳುವನಲ್ಲವೇ. 7 ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ಅವಶ್ಯವಿಲ್ಲದ ತೊಂಬತ್ತೊಂಬತ್ತು ಮಂದಿ ನೀತಿವಂತರಿಗಿಂತ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಹೆಚ್ಚು ಸಂತೋಷವುಂಟಾಗುವುದೆಂದು ನಿಮಗೆ ಹೇಳುತ್ತೇನೆ.