ಕರುಣೆಯಿಲ್ಲದ ಸೇವಕನ ಸಾಮ್ಯ
21 ಆಗ ಪೇತ್ರನು ಆತನ ಬಳಿಗೆ ಬಂದು, "ಕರ್ತನೇ ನನ್ನ ಸಹೋದರನು ನನ್ನ ವಿರುದ್ಧ ಪಾಪ ಮಾಡಿದರೆ ನಾನು ಎಷ್ಟು ಸಾರಿ ಅವನನ್ನು ಕ್ಷಮಿಸಬೇಕು? ಏಳು ಸಾರಿಯೋ?" ಎಂದು ಕೇಳಿದನು. 22 ಯೇಸು ಅವನಿಗೆ, "ಏಳು ಸಾರಿ ಎಂದಲ್ಲ ಏಳೆಪ್ಪತ್ತು ಸಾರಿ ಎಂದು ನಿನಗೆ ಹೇಳುತ್ತೇನೆ. 23 ಆದುದರಿಂದ ಪರಲೋಕ ರಾಜ್ಯವು ತನ್ನ ಸೇವಕರಿಂದ ಲೆಕ್ಕವನ್ನು ತೆಗೆದುಕೊಳ್ಳಬೇಕೆಂದಿದ್ದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ. 24 ಅವನು ಲೆಕ್ಕ ತೆಗೆದುಕೊಳ್ಳುವುದಕ್ಕೆ ಪ್ರಾರಂಭಮಾಡಿದಾಗ 18:24 ಮೂಲ 10,000 ತಲಾಂತು; ತಲಾಂತು ಅಂದರೆ ಸುಮಾರು 3,000 ರೂಪಾಯಿ. ಹತ್ತು ಸಾವಿರ ಬಂಗಾರದ ನಾಣ್ಯ ನೀಡಬೇಕಿದ್ದ ಸೇವಕನನ್ನು ಅವನ ಬಳಿಗೆ ಕರತಂದರು. 25 ಆ ಸಾಲ ತೀರಿಸುವುದಕ್ಕೆ ಅವನಲ್ಲಿ ಏನೂ ಇಲ್ಲದುದರಿಂದ ಅವನ ಒಡೆಯನು ಅವನನ್ನೂ, ಅವನ ಹೆಂಡತಿ, ಮಕ್ಕಳನ್ನೂ ಅವನಿಗಿದ್ದದ್ದೆಲ್ಲವನ್ನೂ ಮಾರಿ ಅದನ್ನು ತೀರಿಸಬೇಕೆಂದು ಅಪ್ಪಣೆ ಮಾಡಿದನು. 26 ಆ ಸೇವಕನು ಮೊಣಕಾಲೂರಿ ತನ್ನ ತಲೆಯನ್ನು ಬಾಗಿ ಅವನಿಗೆ, ‘ಒಡೆಯನೇ, ನನ್ನ ಮೇಲೆ ತಾಳ್ಮೆಯಿರಲಿ, ನಿನ್ನದೆಲ್ಲವನ್ನೂ ನಾನು ಕೊಟ್ಟು ತೀರಿಸುತ್ತೇನೆಂದು’ ಹೇಳಿದನು. 27 ಆ ಸೇವಕನ ಒಡೆಯನು ಕನಿಕರಪಟ್ಟು ಅವನನ್ನು ಬಿಡಿಸಿ ಆ ಸಾಲವನ್ನೆಲ್ಲಾ ಮನ್ನಿಸಿಬಿಟ್ಟನು. 28 ತರುವಾಯ ಆ ಸೇವಕನು ಹೊರಕ್ಕೆ ಬಂದು ತನಗೆ ನೂರು ಬೆಳ್ಳಿ ನಾಣ್ಯ ಕೊಡಬೇಕಾಗಿದ್ದ ಒಬ್ಬ ಜೊತೆ ಸೇವಕನನ್ನು ಕಂಡು ಅವನನ್ನು ಹಿಡಿದು ಕುತ್ತಿಗೆ ಹಿಸುಕಿ, ‘ನನ್ನ ಸಾಲ ತೀರಿಸು’ ಎಂದು ಹೇಳಿದನು. 29 ಆದರೆ ಅವನ ಜೊತೆ ಸೇವಕನು ಮೊಣಕಾಲೂರಿ, ‘ನನ್ನ ಮೇಲೆ ತಾಳ್ಮೆಯಿರಲಿ ನಾನು ತೀರಿಸುತ್ತೇನೆ’ ಎಂದು ಬೇಡಿಕೊಂಡನು. 30 ಆದರೆ ಅವನು ಒಪ್ಪದೆ ಹೊರಟುಹೋಗಿ ಆ ಸಾಲ ತೀರಿಸುವ ತನಕ ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. 31 ಅವನ ಜೊತೆ ಸೇವಕರು ನಡೆದ ಸಂಗತಿಯನ್ನು ನೋಡಿ ಬಹಳವಾಗಿ ದುಃಖಪಟ್ಟು ತಮ್ಮ ಒಡೆಯನ ಬಳಿಗೆ ಬಂದು ನಡೆದದ್ದನ್ನೆಲ್ಲಾ ಆತನಿಗೆ ತಿಳಿಸಿದರು. 32 ಆಗ ಅವನ ಒಡೆಯನು ಅವನನ್ನು ಕರಸಿ, ‘ಓ, ದುಷ್ಟ ಸೇವಕನೇ, ನೀನು ನನ್ನನ್ನು ಬೇಡಿಕೊಂಡದ್ದರಿಂದ ನಿನ್ನ ಸಾಲವನ್ನೆಲ್ಲಾ ನಾನು ಮನ್ನಿಸಿಬಿಟ್ಟೆನಲ್ಲವೇ? 33 ನಾನು ನಿನ್ನನ್ನು ಕರುಣಿಸಿದ ಹಾಗೆ ನೀನು ಸಹ ನಿನ್ನ ಜೊತೆ ಸೇವಕನನ್ನು ಕರುಣಿಸಬಾರದಾಗಿತ್ತೇ?’ ಎಂದು ಹೇಳಿ, 34 ಒಡೆಯನು ಸಿಟ್ಟುಗೊಂಡು ತನಗೆ ಕೊಡಬೇಕಾದ ಸಾಲವನ್ನು ತೀರಿಸುವ ತನಕ ಅವನನ್ನು ಪೀಡಿಸುವವರ ಕೈಗೆ ಒಪ್ಪಿಸಿದನು. 35 18:35 ಮತ್ತಾ 6:14, 15; ಯಾಕೋಬ 2:13:ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸಹೋದರನಿಗೆ ಹೃದಯಪೂರ್ವಕವಾಗಿ ಕ್ಷಮಿಸದೇ ಹೋದರೆ ಪರಲೋಕದಲ್ಲಿರುವ ನನ್ನ ತಂದೆಯು ನಿಮಗೂ ಹಾಗೆಯೇ ಮಾಡುವನು" ಅಂದನು.