Publicidade

Salmos 35

ವೈರಿಗಳಿಂದ ಬಿಡಿಸಬೇಕೆಂಬ ವಿಜ್ಞಾಪನೆ
ದಾವೀದನ ಕೀರ್ತನೆ.

1 ಯೆಹೋವನೇ, ನನ್ನ ಸಂಗಡ ವ್ಯಾಜ್ಯ ಮಾಡುವವರೊಡನೆ ವ್ಯಾಜ್ಯಮಾಡು;

ನನ್ನ ಮೇಲೆ ಯುದ್ಧ ಮಾಡುವವರ ಸಂಗಡ ಯುದ್ಧ ಮಾಡು.

2 ಖೇಡ್ಯ ಮತ್ತು ಗುರಾಣಿಯನ್ನು ಹಿಡಿದುಕೊಂಡು,

ನನಗೆ ಸಹಾಯಕನಾಗಿ ನಿಲ್ಲು.

3 ನೀನು ಭರ್ಜಿಯನ್ನೂ ಹಾಗೂ ಯುದ್ಧದ ಕೊಡಲಿಯನ್ನೂ ಹಿಡಿದು,

ನನ್ನನ್ನು ಹಿಂದಟ್ಟುವ ವೈರಿಗಳನ್ನು ಎದುರಿಸು;

"ನಾನೇ ನಿನ್ನ ರಕ್ಷಣೆ" ಎಂದು ಅಭಯಕೊಡು.

4 ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವವರು ಆಶಾಭಂಗಪಟ್ಟು ಅವಮಾನಹೊಂದಲಿ;

ನನಗೆ ಕೇಡನ್ನು ಕಲ್ಪಿಸುವವರು ಕಳವಳದಿಂದ ಹಿಂದಿರುಗಿ ಓಡಲಿ.

5 ಅವರು ಗಾಳಿ ಹಾರಿಸುವ ಹೊಟ್ಟಿನಂತಾಗಲಿ;

ಯೆಹೋವನ ದೂತನು ಅವರನ್ನು ಅಟ್ಟಿಬಿಡಲಿ.

6 ಕತ್ತಲೆಯೂ, ಜಾರಿಕೆಯೂ ಇರುವ ದಾರಿಯಲ್ಲಿ

ಯೆಹೋವನ ದೂತನು ಅವರನ್ನು ಹಿಂದಟ್ಟಲಿ.

7 ಅವರು ನಿಷ್ಕಾರಣವಾಗಿ ನನಗೆ ಬಲೆಯೊಡ್ಡಿದ್ದಾರೆ;

ಕಾರಣವಿಲ್ಲದೆ ನನ್ನ ಪ್ರಾಣವನ್ನು ತೆಗೆಯಬೇಕೆಂದು ಗುಂಡಿಯನ್ನು ತೋಡಿದ್ದಾರೆ.

8 ಅವನಿಗೆ ನಾಶನವು ಆಕಸ್ಮಾತ್ತಾಗಿ ಬರಲಿ;

ತಾನು ಹಾಸಿದ ಬಲೆಯಲ್ಲಿ ತಾನೇ ಸಿಕ್ಕಿಬೀಳಲಿ.

ತಾನು ತೋಡಿದ ಕುಣಿಯಲ್ಲಿ ತಾನೇ ಬಿದ್ದುಹೋಗಲಿ.

9 ಆಗ ನನ್ನ ಮನಸ್ಸಿಗೆ ಯೆಹೋವನ ದೆಸೆಯಿಂದ ಹರ್ಷವುಂಟಾಗುವುದು;

ಆತನಿಂದಾದ ರಕ್ಷಣೆಯ ನಿಮಿತ್ತ ಆನಂದಪಡುವೆನು.

10 ಯೆಹೋವನೇ, ಕುಗ್ಗಿದವನನ್ನು ಬಲಾತ್ಕಾರಿಯಿಂದಲೂ,

ದಿಕ್ಕಿಲ್ಲದ ಬಡವನನ್ನು ಸೂರೆಮಾಡುವವನಿಂದಲೂ ತಪ್ಪಿಸಿ ರಕ್ಷಿಸುವಾತನೇ,

"ನಿನಗೆ ಸಮಾನರು ಯಾರಿದ್ದಾರೆ?" ಎಂದು ನನ್ನ ಎಲುಬುಗಳೆಲ್ಲಾ ಹೇಳುವವು.

11 ನ್ಯಾಯವಿರುದ್ಧ ಸಾಕ್ಷಿಗಳು ನನಗೆ ವಿರುದ್ಧವಾಗಿ ಎದ್ದಿದ್ದಾರೆ;

ನಾನರಿಯದ ಸಂಗತಿಗಳ ವಿಷಯದಲ್ಲಿ ನನ್ನನ್ನು ವಿಚಾರಿಸುತ್ತಾರೆ.

12 ಅವರು ಉಪಕಾರಕ್ಕೆ ಅಪಕಾರವನ್ನೇ ಮಾಡುತ್ತಾರೆ;

ನಾನು ದಿಕ್ಕಿಲ್ಲದವನಾದೆನು.

13 ನಾನಾದರೋ ಅವರ ಅಸ್ವಸ್ಥಕಾಲದಲ್ಲಿ ಗೋಣಿ ತಟ್ಟನ್ನೇ ಕಟ್ಟಿಕೊಂಡಿದ್ದೆನು;

ಉಪವಾಸದಿಂದ ನನ್ನ ಆತ್ಮವನ್ನು ನೋಯಿಸಿದೆನು.

ನನ್ನ ಪ್ರಾರ್ಥನೆಯು ಕೇಳಲ್ಪಡಲಿಲ್ಲ.

14 ಅಸ್ವಸ್ಥನಾದವನನ್ನು ಸ್ನೇಹಿತನೋ, ಅಣ್ಣನೋ ಎಂದು ಭಾವಿಸಿ ನಡೆದುಕೊಂಡೆನು;

ತಾಯಿ ಸತ್ತದ್ದಕ್ಕಾಗಿ ದುಃಖಿಸುವವನಂತೆ ನಾನು ತಲೆಬಾಗಿ ಅಳುತ್ತಿದ್ದೆನು.

15 ಆದರೂ ನನಗೆ ಆಪತ್ತು ಬಂದಾಗ,

ಅವರು ಸಂತೋಷಿಸುತ್ತಾ ಕೂಡಿಕೊಂಡರು;

ನಿರಾಕಾರಣವಾಗಿ ಈ ಭ್ರಷ್ಟರು ನನಗೆ ವಿರುದ್ಧವಾಗಿ ಕೂಡಿ ಕೊಂಡಾಡಿದರು,

ಸೂರೆ ಮಾಡುವುದನ್ನು ಬಿಡಲೇ ಇಲ್ಲ.

16 ಆಹಾರಕ್ಕೋಸ್ಕರ ಪರಿಹಾಸ್ಯಮಾಡುವ ಮೂರ್ಖರ ಸಂಗಡ,

ನನ್ನ ಮೇಲೆ ಹಲ್ಲುಕಡಿಯುತ್ತಾರೆ.

17 ಕರ್ತನೇ, ಇನ್ನೆಷ್ಟರ ವರೆಗೆ ಸುಮ್ಮನೆ ನೋಡುತ್ತಾ ಇರುವಿ?

ಅವರ ಅಪಾಯದಿಂದ ನನ್ನ ಪ್ರಾಣವನ್ನು ಬಿಡಿಸು;

ನನ್ನ ಪರಮಪ್ರಿಯ ಪ್ರಾಣವನ್ನು ಆ ಸಿಂಹಗಳ ಬಾಯಿಗೆ ಸಿಕ್ಕದಂತೆ ತಪ್ಪಿಸು.

18 ಆಗ ನಾನು ಮಹಾಸಭೆಯಲ್ಲಿ ನಿನ್ನನ್ನು ಕೊಂಡಾಡುವೆನು;

ಬಹುಜನರ ಮುಂದೆ ಸ್ತುತಿಸುವೆನು.

19 ಅವಶ್ಯವಿಲ್ಲದ ವಿರೋಧಿಗಳು ನನ್ನ ವಿಷಯದಲ್ಲಿ ಹಿಗ್ಗುವುದಕ್ಕೆ ಅವಕಾಶಕೊಡಬೇಡ;

ನಿಷ್ಕಾರಣ ವೈರಿಗಳ ಕಣ್ಣುಸನ್ನೆಗೆ ಆಸ್ಪದಕೊಡಬೇಡ.

20 ಅವರ ಮಾತುಗಳು ಸಮಾಧಾನಕರವಾದವುಗಳಲ್ಲ;

ದೇಶದ ಸಾಧುಜನರನ್ನು ಕೆಡಿಸುವುದಕ್ಕೆ ಮೋಸವನ್ನು ಕಲ್ಪಿಸುತ್ತಾರೆ.

21 ಅವರು ನನ್ನನ್ನು ನೋಡಿ ಬಾಯಿಕಿಸಿದು, "ಆಹಾ, ಆಹಾ, ನಮ್ಮ ಕಣ್ಣು ಕಂಡಿತಲ್ಲಾ" ಎಂದು ಅನ್ನುತ್ತಾರೆ.

22 ಯೆಹೋವನೇ, ನೀನೇ ನೋಡಿದಿಯಲ್ಲವೇ;

ಸುಮ್ಮನಿರಬೇಡ;

ನನ್ನ ಒಡೆಯನೇ, ನನ್ನಿಂದ ದೂರವಾಗಿರುವುದೇಕೆ?

23 ನನ್ನ ದೇವರೇ, ಎದ್ದು ನನಗಾಗಿ ನ್ಯಾಯವನ್ನು ನಿರ್ಣಯಿಸು;

ನನ್ನ ಕರ್ತನೇ, ಎಚ್ಚೆತ್ತು ನನ್ನ ವಿವಾದವನ್ನು ವಿಚಾರಿಸು.

24 ಯೆಹೋವನೇ, ನನ್ನ ದೇವರೇ, ನಿನ್ನ ನೀತಿಗನುಸಾರವಾಗಿ ನನಗೆ ತೀರ್ಪುಕೊಡು;

ನನ್ನ ವಿಷಯದಲ್ಲಿ ಹಿಗ್ಗುವುದಕ್ಕೆ ಶತ್ರುಗಳಿಗೆ ಆಸ್ಪದವಿರಬಾರದು.

25 ಆಹಾ, ನಮ್ಮ ಆಶೆ ನೆರವೇರಿತು ಅಂದುಕೊಳ್ಳುವುದಕ್ಕೆ ಅವರಿಗೆ ಅವಕಾಶವಿರಬಾರದು;

ಅವನನ್ನು ಸಂಪೂರ್ಣವಾಗಿ ನಾಶಮಾಡಿಬಿಟ್ಟಿದ್ದೇವೆಂದು ಅವರು ಕೊಚ್ಚಿಕೊಳ್ಳಬಾರದು.

26 ನನ್ನ ಕೇಡಿನಲ್ಲಿ ಹಿಗ್ಗುವವರೆಲ್ಲರು ಆಶಾಭಂಗಪಟ್ಟು ಅವಮಾನಹೊಂದಲಿ;

ನನ್ನನ್ನು ಹೀಯಾಳಿಸಿ ಆತ್ಮಸ್ತುತಿಮಾಡಿಕೊಳ್ಳುವವರು,

ಅವಮಾನವನ್ನೂ, ಅಪಕೀರ್ತಿಯನ್ನೂ ಹೊಂದಲಿ.

27 ನನ್ನ ನ್ಯಾಯಸ್ಥಾಪನೆಯನ್ನು ಬಯಸುವವರು

ಆನಂದದೊಡನೆ ಜಯಧ್ವನಿಮಾಡಲಿ;

ತನ್ನ ಸೇವಕನ ಹಿತವನ್ನು ಕೋರುವ ಯೆಹೋವನಿಗೆ ಸ್ತೋತ್ರ ಎಂದು ಯಾವಾಗಲೂ ಹೇಳುವವರಾಗಲಿ.

28 ನನ್ನ ನಾಲಿಗೆಯು ನಿನ್ನ ನೀತಿಯನ್ನೂ ಮಹಿಮೆಯನ್ನೂ ದಿನವೆಲ್ಲಾ ವರ್ಣಿಸುವುದು.

Veja também

Publicidade
Bíblia Online Bíblia Online

Bíblia Online • Versão: 2026-06-15_21-32-39-