Publicidade

Salmos 40

ರಕ್ಷಣೆಗಾಗಿ ಪ್ರಾರ್ಥಿಸುವುದು
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ.

1 ನಾನು ಯೆಹೋವನಿಗಾಗಿ ನಿರೀಕ್ಷಿಸಿಯೇ ನಿರೀಕ್ಷಿಸಿದೆನು;

ಆತನು ನನ್ನ ಮೊರೆಗೆ ಕಿವಿಗೊಟ್ಟು ಲಕ್ಷಿಸಿದನು.

2 ನನ್ನನ್ನು ನಾಶನದ ಗುಂಡಿಯೊಳಗಿಂದ ಎತ್ತಿದನು;

ಕೆಸರಿನೊಳಗಿಂದ ನನ್ನನ್ನು ತೆಗೆದು ಬಂಡೆಯ ಮೇಲೆ ನಿಲ್ಲಿಸಿ,

ನಾನು ದೃಢವಾಗಿ ಹೆಜ್ಜೆಯಿಡುವಂತೆ ಮಾಡಿದನು.

3 ಆತನು ನನ್ನ ಬಾಯಲ್ಲಿ ನೂತನ ಕೀರ್ತನೆಯನ್ನು ಹುಟ್ಟಿಸಿದ್ದಾನೆ;

ಅದು ನಮ್ಮ ದೇವರ ಸ್ತೋತ್ರವೇ.

ಆತನ ಮಹತ್ಕಾರ್ಯಗಳನ್ನು ನೋಡಿದ ಅನೇಕರು

ಭಯಭಕ್ತಿಯುಳ್ಳವರಾಗಿ ಯೆಹೋವನಲ್ಲಿ ನಂಬಿಕೆಯಿಡುವರು.

4 ಯಾರು ಅಹಂಕಾರಿಗಳ ಜೊತೆಯಲ್ಲಿಯೂ,

ಸುಳ್ಳುದೇವರನ್ನು ಹಿಂಬಾಲಿಸುವವರಲ್ಲಿಯೂ ಸೇರದೆ,

ಯೆಹೋವನನ್ನೇ ನಂಬುತ್ತಾನೋ, ಅವನೇ ಧನ್ಯನು.

5 ಯೆಹೋವನೇ, ನನ್ನ ದೇವರೇ, ನಿನಗೆ ಸಮಾನನಾದ ದೇವರು ಯಾರು?

ನಮ್ಮ ಹಿತಕ್ಕಾಗಿ ನೀನು ಮಾಡಿದ ಆಲೋಚನೆಗಳೂ,

ಅದ್ಭುತಕಾರ್ಯಗಳೂ ಎಷ್ಟೋ ವಿಶೇಷವಾಗಿವೆ;

ಅವುಗಳನ್ನು ವಿವರಿಸಿ ಹೇಳೋಣವೆಂದರೆ ಅಸಾಧ್ಯ;

ಅವು ಅಸಂಖ್ಯಾತವಾಗಿವೆ.

6 ಯಜ್ಞನೈವೇದ್ಯಗಳು ನಿನಗೆ ಇಷ್ಟವಿಲ್ಲ;

ಸರ್ವಾಂಗಹೋಮಗಳನ್ನಾಗಲಿ, ದೋಷಪರಿಹಾರಕ ಯಜ್ಞಗಳನ್ನಾಗಲಿ ನೀನು ಅಪೇಕ್ಷಿಸಲಿಲ್ಲ.

ಆದರೆ ಶ್ರವಣಶಕ್ತಿಯನ್ನು ನನಗೆ ಅನುಗ್ರಹಿಸಿದಿ.

7 ಆಗ ನಾನು, "ಇಗೋ ಇದ್ದೇನೆ; ನನ್ನ ಕರ್ತವ್ಯವು ಗ್ರಂಥದ ಸುರುಳಿಯಲ್ಲಿ ಬರೆದದೆ.

8 ನನ್ನ ದೇವರೇ, ನಿನ್ನ ಚಿತ್ತವನ್ನು ಅನುಸರಿಸುವುದೇ ನನ್ನ ಸಂತೋಷವು;

ನಿನ್ನ ಧರ್ಮೋಪದೇಶವು ನನ್ನ ಅಂತರಂಗದಲ್ಲಿದೆ" ಅಂದೆನು.

9 ನೀನು ನೀತಿಯನ್ನು ಸಾಧಿಸಿದ ಶುಭಸಮಾಚಾರವನ್ನು,

ಧಾರಳವಾಗಿ ಮಹಾಸಭೆಯಲ್ಲಿ ಪ್ರಕಟಿಸಿದೆನು;

ಯೆಹೋವನೇ, ನೀನೇ ಬಲ್ಲೆ.

10 ನಿನ್ನ ನೀತಿಸಾಧನೆಯನ್ನು ಮರೆಮಾಡಲಿಲ್ಲ;

ನಿನ್ನ ನಂಬಿಕೆಯನ್ನೂ, ರಕ್ಷಣೆಯನ್ನೂ ಪ್ರಸಿದ್ಧಪಡಿಸಿದೆನು;

ನಿನ್ನ ಕೃಪಾಸತ್ಯತೆಗಳನ್ನು ಮಹಾಸಮುದಾಯದಲ್ಲಿ ತಿಳಿಸದೆ ಇರಲಿಲ್ಲ.

11 ಯೆಹೋವನೇ, ನೀನಂತೂ ನಿನ್ನ ಕರುಣೆಯನ್ನು ನನ್ನಿಂದ ಅಗಲಿಸಬೇಡ;

ನಿನ್ನ ಕೃಪಾಸತ್ಯತೆಗಳು ನನ್ನನ್ನು ಯಾವಾಗಲೂ ಕಾಪಾಡಲಿ.

12 ಏಕೆಂದರೆ ಲೆಕ್ಕವಿಲ್ಲದ ಆಪತ್ತುಗಳು ನನ್ನನ್ನು ಸುತ್ತಿಕೊಂಡಿವೆ;

ನನ್ನ ಪಾಪಗಳು ನನ್ನನ್ನು ಹಿಂದಟ್ಟಿ ಹಿಡಿದಿರುತ್ತವೆ,

ನನಗೆ ದಿಕ್ಕೇ ತೋರುವುದಿಲ್ಲ. ಅವು ನನ್ನ ತಲೆಯ ಕೂದಲುಗಳಿಗಿಂತಲೂ ಹೆಚ್ಚಾಗಿವೆ,

ನಾನು ಎದೆಗುಂದಿ ಹೋದೆನು.

13 ಯೆಹೋವನೇ, ದಯವಿಟ್ಟು ನನ್ನನ್ನು ರಕ್ಷಿಸು;

ಯೆಹೋವನೇ, ಬೇಗನೆ ಬಂದು ಸಹಾಯಮಾಡು.

14 ನನ್ನ ಪ್ರಾಣವನ್ನು ತೆಗೆಯುವುದಕ್ಕೆ ಸಮಯನೋಡುವವರು,

ಆಶಾಭಂಗಪಟ್ಟು ಅವಮಾನಹೊಂದಲಿ;

ನನ್ನ ಆಪತ್ತಿನಲ್ಲಿ ಸಂತೋಷಿಸುವವರು ಅಪಮಾನದಿಂದ ಹಿಂದಿರುಗಿ ಓಡಲಿ.

15 ಆಹಾ, ಆಹಾ ಎಂದು ನನ್ನನ್ನು ಪರಿಹಾಸ್ಯಮಾಡುವವರು,

ತಮಗೆ ಆಗುವ ಅವಮಾನದಿಂದ ವಿಸ್ಮಯಗೊಳ್ಳಲಿ.

16 ನಿನ್ನ ದರ್ಶನವನ್ನು ಕೋರುವವರೆಲ್ಲರು ನಿನ್ನಲ್ಲಿ ಉಲ್ಲಾಸದಿಂದ ಸಂತೋಷಿಸಲಿ;

ನಿನ್ನ ಜಯದಲ್ಲಿ ಆನಂದಿಸುವವರು, "ಯೆಹೋವನು ಮಹೋನ್ನತನು" ಎಂದು ಯಾವಾಗಲೂ ಹೇಳುವವರಾಗಲಿ.

17 ನಾನಾದರೋ ಕುಗ್ಗಿದವನೂ, ದಿಕ್ಕಿಲ್ಲದವನೂ ಆಗಿದ್ದೇನೆ;

ಕರ್ತನೇ ನನ್ನ ಹಿತಚಿಂತಕನು.

ನನ್ನ ದೇವರೇ, ನೀನೇ ನನಗೆ ಸಹಾಯಕನೂ, ರಕ್ಷಕನೂ ಆಗಿದ್ದೀ;

ತಡಮಾಡಬೇಡ.

Veja também

Publicidade
Bíblia Online Bíblia Online

Bíblia Online • Versão: 2026-06-16_18-40-07-