Publicidade

Salmos 92

ದೇವರ ನೀತಿಸಾಧನೆಗಳನ್ನು ಹೊಗಳುವುದು
ಕೀರ್ತನೆ; ಸಬ್ಬತ್ ದಿನದ ಗೀತೆ.

1 ಯೆಹೋವನೇ, ನಿನ್ನನ್ನು ಕೊಂಡಾಡುವುದೂ,

ಪರಾತ್ಪರನಾದ ದೇವರೇ, ನಿನ್ನ ನಾಮವನ್ನು ಸಂಕೀರ್ತಿಸುವುದೂ ಯುಕ್ತವಾಗಿದೆ.

2 ವೀಣೆ, ಸ್ವರಮಂಡಲಗಳಿಂದಲೂ, ಕಿನ್ನರಿಯ ಘನಸ್ವರದಿಂದಲೂ,

3 ಹೊತ್ತಾರೆಯಲ್ಲಿ ನಿನ್ನ ಪ್ರೇಮವನ್ನೂ,

ರಾತ್ರಿಯಲ್ಲಿ ನಿನ್ನ ಸತ್ಯವನ್ನೂ ವರ್ಣಿಸುವುದು ಉಚಿತವಾಗಿದೆ.

4 ಯೆಹೋವನೇ, ನಿನ್ನ ಕ್ರಿಯೆಗಳಿಂದ ನನ್ನನ್ನು ಸಂತೋಷಪಡಿಸಿದ್ದಿ;

ನಿನ್ನ ಕೆಲಸಗಳಿಗಾಗಿ ಉತ್ಸಾಹಧ್ವನಿ ಮಾಡುತ್ತೇನೆ.

5 ಯೆಹೋವನೇ, ನಿನ್ನ ಕೃತ್ಯಗಳು ಎಷ್ಟೋ ಶ್ರೇಷ್ಠವಾಗಿವೆ;

ನಿನ್ನ ಆಲೋಚನೆಗಳು ಅಶೋಧ್ಯವಾಗಿವೆ.

6 ಪಶುಪ್ರಾಯನು ಅರಿಯನು;

ಮೂರ್ಖನು ಇದನ್ನು ಗ್ರಹಿಸಿಕೊಳ್ಳನು.

7 ದುಷ್ಟರು ಹುಲ್ಲಿನಂತೆ ಬೆಳೆಯುವುದೂ,

ಕೆಡುಕರು ಹೂವಿನಂತೆ ಮೆರೆಯುವುದೂ ತೀರಾ ಹಾಳಾಗುವುದಕ್ಕಾಗಿಯೇ.

8 ಯೆಹೋವನೇ, ನೀನಾದರೋ ಸದಾ ಉನ್ನತಸ್ಥಾನದಲ್ಲಿರುತ್ತೀ.

9 ಯೆಹೋವನೇ, ಇಗೋ ನಿನ್ನ ಶತ್ರುಗಳು!

ಅವರೆಲ್ಲಾ ನಾಶವಾಗುತ್ತಿದ್ದಾರೆ. ಅಧರ್ಮಿಗಳೆಲ್ಲಾ ಚದರಿಹೋಗುವರು.

10 ಆದರೆ ನನ್ನ ಕೊಂಬನ್ನು ಕಾಡುಕೋಣದ ಕೊಂಬಿನಂತೆ ಎತ್ತಿದ್ದಿ;

ಚೈತನ್ಯತೈಲದಿಂದ ನನ್ನನ್ನು ಅಭಿಷೇಕಿಸಿದ್ದಿ.

11 ನನ್ನ ಶತ್ರುಗಳಿಗುಂಟಾದ ದುರ್ಗತಿಯನ್ನು ಕಣ್ಣಾರೆ ಕಂಡಿದ್ದೇನೆ;

ನನಗೆ ವಿರುದ್ಧವಾಗಿ ಎದ್ದವರ ವಿಪತ್ತನ್ನು ಕಿವಿಯಾರೆ ಕೇಳಿದ್ದೇನೆ.

12 ನೀತಿವಂತರು ಖರ್ಜೂರದ ಮರದಂತೆ ಬೆಳೆಯುವರು;

ಲೆಬನೋನಿನ ದೇವದಾರು ವೃಕ್ಷದ ಹಾಗೆ ವೃದ್ಧಿಯಾಗುವರು.

13 ಯೆಹೋವನ ಆಲಯದಲ್ಲಿ ಸಸಿಗಳಂತೆ ನೆಡಲ್ಪಟ್ಟವರು,

ನಮ್ಮ ದೇವರ ಅಂಗಳದಲ್ಲಿ ಚೆನ್ನಾಗಿ ಬೆಳೆಯುವರು.

14 ಮುಪ್ಪಿನಲ್ಲಿಯೂ ಫಲಿಸುವರು;

ಪುಷ್ಟಿಯಾಗಿದ್ದು ಶೋಭಿಸುವರು.

15 ಹೀಗೆ ಅವರು ಯೆಹೋವನ ಸತ್ಯಸಂಧತೆಗೆ ದೃಷ್ಟಾಂತರಾಗಿರುವರು.

ಆತನೇ ನನ್ನ ಬಂಡೆಯು; ಆತನು ನಿರ್ವಂಚಕನು.

Veja também

Publicidade
Bíblia Online Bíblia Online

Bíblia Online • Versão: 2026-06-16_18-40-07-